ಜನರ ಸಮಸ್ಯೆಗೆ ನೆರವಾದ ಪ್ರಜಾಸೇವೆ ಆಂದೋಲನ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿಕೆ ಮರಳಿ ಹೋಬಳಿ ಮಟ್ಟದಲ್ಲಿ ಯಶಸ್ವಿಯಾಗಿ ಜರುಗಿದ ಪ್ರಜಾಸೇವೆ ಆಂದೋಲನ…

*ಗಂಗಾವತಿ* : ಸರಕಾರದ ಯೋಜನೆಗಳು ಮನೆ-ಮನೆಗೂ ತಲುಪಲಿ ಎಂಬ ಉದ್ದೇಶದಿಂದ ರಾಜ್ಯ ಸರಕಾರ ನಡೆಸುತ್ತಿರುವ ಪ್ರಜಾಸೇವೆ ಆಂದೋಲನ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಹೇಳಿದರು.ತಾಲೂಕಿನ ಮರಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಪ್ರಜಾಸೇವೆ ಇಲಾಖೆ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಮರಳಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತುಂಬಾ ಉಪಯುಕ್ತವಾಗಿವೆ. ಪಡಿತರ ವಿತರಣೆಯಲ್ಲಿ ಏನಾದರೂ ತೊಂದರೆಗಳು ಇದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತರಬೇಕು. ಅಧಿಕಾರಿಗಳು ಸರಕಾರದ ಬೆನ್ನೆಲುಬು ಇದ್ದಂಗೆ, ಅಧಿಕಾರಿಗಳು ಪ್ರಜಾಸೇವೆ ಆಂದೋಲನ ನಡೆಸುವಾಗ ಗ್ರಾಮದ ಹಿರಿಯರ ಸಲಹೆಗಳನ್ನು ಕೂಡ ಕೇಳಬೇಕು. ಗಂಗಾವತಿಯಲ್ಲಿ ಕಳೆದ ತಿಂಗಳು ನಡೆದ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಅಡಿಯಲ್ಲಿ ಸಲ್ಲಿಕೆಯಾಗಿದ್ದ 830 ಅಹವಾಲುಗಳ ಅರ್ಜಿಗಳಲ್ಲಿ 800 ಅರ್ಜಿಗಳು ಈಗಾಗಲೇ ವಿಲೇವಾರಿಯಾಗಿವೆ. . ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ತಹಸೀಲ್ದಾರರಾದ ವಿನಾಯಕ ಗೋಡಬೋಲೆ ಅವರು ಮಾತನಾಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ವಿವಿಧ ಸರ್ಕಾರಿ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನವನ್ನು ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಂದ ವಿವಿಧ ಇಲಾಖೆಗಳ ಅಡಿಯಲ್ಲಿ ಸಲ್ಲಿಸಲಾದ ಅಹವಾಲುಗಳು ಮತ್ತು ಸಮಸ್ಯೆಗಳನ್ನು ಸ್ವೀಕರಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮರೆಡ್ಡಿ ಪಾಟೀಲ್ ಅವರು ಮಾತನಾಡಿ, ಪ್ರಜಾಸೇವೆ ಆಂದೋಲನದಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡುವ ಕೆಲಸ ಮಾಡಲಾಗುತ್ತಿದೆ. ಗಂಗಾವತಿಯಲ್ಲಿ ನಡೆದ ಜಿಲ್ಲಾ ಹಾಗೂ ಹೋಬಳಿ ಮಟ್ಟದ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಕೆಲವು ಮಾತ್ರ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದ ಬಾಕಿ ಉಳಿದಿವೆ. ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳಿಗೆ ತಾಲೂಕು ಕಚೇರಿಗಳಿಗೆ ಅಲೆದಾಡದೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಲು ಇಂತಹ ಜನಸ್ನೇಹಿ ಆಂದೋಲನಗಳು ಸಹಕಾರಿಯಾಗಿವೆ ಎಂದರು. ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿಗಳಾದ ಹುಲಗಪ್ಪ, ಸಿಡಿಪಿಓ ಶಿವಶರಣಪ್ಪ, ಗ್ರೇಡ್ 2 ತಹಸೀಲ್ದಾರ್ ವೆಂಕಟೇಶ, ಗ್ರಾಪಂ ಪಿಡಿಓ ಬಸವರಾಜ ಗೌಡ್ರು, ವಿವಿಧ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

