ಡಾ. ಈಶ್ವರ್ ಎಸ್. ಸವಡಿ ಅವರಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನೇಮಕ.

ಕೊಪ್ಪಳ, ಜು.16: ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ತಜ್ಞ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಈಶ್ವರ್ ಎಸ್. ಸವಡಿ ಅವರನ್ನು ಕೊಪ್ಪಳ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO)ಯಾಗಿ ನೇಮಕ ಮಾಡಲಾಗಿದೆ.ಆರೋಗ್ಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಡಾ. ಸವಡಿ ಅವರು ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಜನರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಕನಕಗಿರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವರ ಸೇವಾ ಅವಧಿಯಲ್ಲಿ ಸಾರ್ವಜನಿಕ ಆರೋಗ್ಯ, ತಾಯಿ-ಮಗು ಆರೈಕೆ, ರೋಗ ನಿಯಂತ್ರಣ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಜನಮನ್ನಣೆ ಪಡೆದಿದ್ದಾರೆ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಡಾ. ಈಶ್ವರ್ ಎಸ್. ಸವಡಿ ಅವರು, ಜಿಲ್ಲೆಯ ಆರೋಗ್ಯ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವುದು, ಸರ್ಕಾರಿ ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ, ವೈದ್ಯಕೀಯ ಸಿಬ್ಬಂದಿ ಸಮನ್ವಯ ಹಾಗೂ ಆರೋಗ್ಯ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.ಡಾ. ಸವಡಿ ಅವರ ನೇಮಕಕ್ಕೆ ಜಿಲ್ಲೆಯ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯರು, ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

