ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಆತ್ಮೀಯ ಸನ್ಮಾನ…

ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಆತ್ಮೀಯ ಸನ್ಮಾನ…

ಗಂಗಾವತಿ: ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವರಾದ ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಶ್ರೀರಾಮನಗರ, ಕಲ್ಗುಡಿ, ಮರಳಿ, ಚಿಕ್ಕಜಂತಕಲ್ ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.ಗಂಗಾವತಿಯಲ್ಲಿರುವ ಮಲ್ಲಿಕಾರ್ಜುನ ನಾಗಪ್ಪ ಅವರ ನಿವಾಸಕ್ಕೆ ಆಗಮಿಸಿದ ವಿವಿಧ ಗ್ರಾಮಗಳ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲು ಹೊದಿಸಿ, ಹೂಮಾಲೆ ಹಾಕಿ ಸನ್ಮಾನಿಸಿ, ಅವರ ಮುಂದಿನ ರಾಜಕೀಯ ಹಾಗೂ ಸಂಘಟನಾ ಕಾರ್ಯಗಳಿಗೆ ಶುಭ ಹಾರೈಸಿದರು.ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಗ್ರಾಮೀಣ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಮಲ್ಲಿಕಾರ್ಜುನ ನಾಗಪ್ಪ ಅವರ ನೇಮಕ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ ಎಂದು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.ಮಾಜಿ ಸಚಿವರಾಗಿ ಹಾಗೂ ಪಕ್ಷದ ಹಿರಿಯ ನಾಯಕರಾಗಿ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ದೊರೆತಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಮರೇಶ ಗೋನಾಳ, ಕಲ್ಗುಡಿ ಪ್ರಸಾದ್, ಸತ್ಯನಾರಾಯಣ, ಧನಂಜಯ, ನಾಗೇಶ್ವರರಾವ್, ಕಾಂತ ರಾವ್, ರಮೇಶ್ ಕುಲಕರ್ಣಿ, ಹುಲ್ಲಗಪ್ಪ, ಕೃಷ್ಣಸ್ವಾಮಿ, ದಾನಪ್ಪ ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್ ಮುಖಂಡರು, ಹಿರಿಯ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *